ಸಾರಿಗೆ ಬಸ್‌ನಲ್ಲಿ ಮಹಿಳೆಯರ ಜೊತೆ ಪುರುಷ ಪ್ರಯಾಣಿಕರಿಗೂ ಸ್ಮಾರ್ಟ್ ಕಾರ್ಡ್ ಭಾಗ್ಯ!
ಸಾರಿಗೆ ಸಚಿವ ಬೈರತಿ ಸುರೇಶ್ ಅವರು ರಾಜ್ಯದ ಮೂರು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಯೋಜನೆಯನ್ನು ಪ್ರಕಟಿಸಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಸ್ಮಾರ್ಟ್ ಕಾರ್ಡ್ ಮತ್ತು ಪುರುಷರಿಗೆ ಕಾರ್ಡ್‌ಗಳನ್ನು ನೀಡಲಾಗುವುದು.
ಮಹಿಳೆಯರೂ ಸೇರಿ ರಾಜ್ಯದ ಮೂರು ಕೋಟಿಗೂ ಅಧಿಕ ಸಾರಿಗೆ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು. ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಾಲ್ಕೂ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವರಾದ ನಂತರ ಮೊದಲ ಬಾರಿ ಸಭೆ ನಡೆಸಲಾಯ್ತು.
ಸಭೆ ಬಳಿಕ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು ಶಕ್ತಿ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತದೆ. ಅದಕ್ಕಾಗಿ ರಾಜ್ಯ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದರು.
ಅಲ್ಲದೆ, ಶಕ್ತಿ ಸ್ಮಾರ್ಟ್ ಕಾರ್ಡ್ ಮಾದರಿಯಲ್ಲಿ ಪುರುಷರಿಗೂ ರೀಚಾರ್ಜ್ ಮಾಡಬಹುದಾದಂಥ ಸ್ಮಾರ್ಟ್ ನೀಡಲು ಉದ್ದೇಶಿಸಲಾಗಿದೆ. ಒಟ್ಟಾರೆ ರಾಜ್ಯದ 3 ಕೋಟಿ ಜನರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ. ಶಕ್ತಿ ಸ್ಮಾರ್ಟ್‌ಕಾರ್ಡ್ ಉಚಿತ ಪ್ರಯಾಣಕ್ಕೆ ಬಳಸಬಹುದಾಗಿದ್ದು, ಪುರುಷರಿಗೆ ನೀಡುವ ಸ್ಮಾರ್ಟ್‌ಕಾರ್ಡ್‌ಗಳಿಗೆ ಹಣ ತುಂಬಿ ಅದರ ಮೂಲಕ ಟಿಕೆಟ್ ದರ ಪಾವತಿಸುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.